Breaking News

ಪಾಕಿಸ್ತಾನಿಯರಿಗೆ ಪ್ರವೇಶ ನಿಷೇಧ, ಸಿಂಧೂ ಜಲ ಒಪ್ಪಂದ ರದ್ದು!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಪಾಕ್‌ ಸಂಬಂಧಕ್ಕೆ ಎಳ್ಳುನೀರು ಬಿಡಲಾಗಿದೆ.

ನಿನ್ನೆ ನಡೆದ ಸಭೆಯಲ್ಲಿ ಭಾರತ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಸಂಪೂರ್ಣವಾಗಿ ನಿಲ್ಲಿಸುವವರೆಗೆ 1960ರ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗುತ್ತದೆ. ಅಟ್ಟಾರಿ ಚೆಕ್ ಪೋಸ್ಟ್ ಮುಚ್ಚಲಾಗುವುದು, ಸಿಂಧೂ ಜಲ ಒಪ್ಪಂದವನ್ನು ತಕ್ಷಣವೇ ಸ್ಥಗಿತಗೊಳಿಸಲಾಗುವುದು ಎಂದು ವಿದೇಶಾಂಗ ಸಚಿವಾಲಯ ಖಚಿತಪಡಿಸಿದೆ. ನಿನ್ನೆ ನಡೆದ ಸಭೆಯಲ್ಲಿ ಭಾರತ ಗಡಿಯಾಚೆಗಿನ ಭಯೋತ್ಪಾದನೆ ಕೊನೆಗೊಳಿಸಲು ಮತ್ತು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ ಅನ್ನು ತಕ್ಷಣದಿಂದ ಮುಚ್ಚುವುದು, ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು, ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸುವುದು ಮತ್ತು 1960ರ ಸಿಂಧು ನದಿ ಒಪ್ಪಂದವನ್ನು ರದ್ದು ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೇಂದ್ರ ಸಂಪುಟ ಸಮಿತಿ ತೆಗೆದುಕೊಂಡಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ತಿಳಿಸಿದ್ದಾರೆ.

ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ವೀಸಾಗಳ ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಲು ನೀಡಿದ ಅನುಮತಿಯನ್ನು ತಡೆಹಿಡಿಯಲಾಗುತ್ತಿದೆ. ಈ ಹಿಂದೆ ನೀಡಿದ್ದ ಯಾವುದೇ SVES ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗುತ್ತದೆ. ಈ ವೀಸಾ ಅಡಿಯಲ್ಲಿ ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆ 48 ಗಂಟೆಯೊಳಗೆ ಭಾರತ ತೊರೆಯಬೇಕೆಂದು ಹೇಳಿದೆ.

ಜೊತೆಗೆ ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌, ರಕ್ಷಣಾ/ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಹಂತಹಂತವಾಗಿ ಭಾರತದಿಂದ ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.

Follow us on Social media

About the author