Breaking News

ಮಂಗಳೂರು: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗಣಿ ಇಲಾಖೆ ಉಪನಿರ್ದೇಶಕಿ, ಇಬ್ಬರು ಸಿಬ್ಬಂದಿ

ಮಂಗಳೂರು: ಮನೆ ನಿರ್ಮಿಸುವುದಕ್ಕೆ ಭೂಮಿಯ ಕಲ್ಲು ತೆರವು ಮಾಡಲು ಸಮತಟ್ಟು ಮಾಡುವುದಕ್ಕಾಗಿ ಅಗತ್ಯ ಅನುಮತಿ ನೀಡುವುದಕ್ಕೆ 50,000 ರೂ. ಲಂಚ ಬೇಡಿಕೆ ಇರಿಸಿದ ಗಣಿ ಇಲಾಖೆ ಉಪನಿರ್ದೇಶಕಿ, ಇಬ್ಬರು ಸಿಬ್ಬಂದಿಗಳು ಮಂಗಳೂರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಮಂಗಳೂರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ, ಸಿಬ್ಬಂದಿ ಪ್ರದೀಪ್ ಹಾಗೂ ಉಪನಿರ್ದೇಶಕರ ಚಾಲಕ ಮಧು ಪೊಲೀಸರ ಬಲೆಗೆ ಬಿದ್ದಿರುತ್ತಾರೆ.

ವ್ಯಕ್ತಿಯೊಬ್ಬರು ತಮ್ಮ ಪರಿಚಯದವರ ಹೆಸರಿನಲ್ಲಿ ಇರುವ ಉಳ್ಳಾಲ ತಾಲೂಕು ಇರಾ ಗ್ರಾಮದ ಸರ್ವೆ ನಂಬ್ರ 279/5 ರಲ್ಲಿ 1.39 ಎಕರೆ ವಿಸ್ತೀರ್ಣದ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆಯನ್ನು ಕಟ್ಟುವ ಉದ್ದೇಶದಿಂದ ಕಟ್ಟಡಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿ ನೀಡಲು ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ 2024ರ ಅ.28ರಂದು ಅರ್ಜಿಯನ್ನು ಸಲ್ಲಿಸಿರುತ್ತಾರೆ. ಉಳ್ಳಾಲ ತಾಲೂಕು ತಹಶೀಲ್ದಾರರು ಸಮತಟ್ಟು ಮಾಡುವ ಸಲುವಾಗಿ ಜಮೀನಿನಲ್ಲಿ ಲಭ್ಯವಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ/ದೃಢಿಕರಣ ಪತ್ರ ನೀಡಬಹುದಾಗಿದೆ ಎಂದು 2025ರ ಮಾರ್ಚ್ 21ರಂದು ವರದಿ ಸಲ್ಲಿಸಿದ್ದರೂ, ಕೂಡ ಗಣಿ ಇಲಾಖೆಯಿಂದ ಅನುಮತಿ ನೀಡಿರುವುದಿಲ್ಲ.

ಈ ಕುರಿತು ಅರ್ಜಿಯ ಬಗ್ಗೆ ವಿಚಾರಿಸಲು ದೂರುದಾರರು ಮಂಗಳೂರು ಗಣಿ ಇಲಾಖೆ ಕಚೇರಿಗೆ ತೆರಳಿದ್ದು, ಉಪನಿರ್ದೇಶಕಿ ಕೃಷ್ಣವೇಣಿ ಅವರು ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಯಿಸಿ ಫೈಲಿಗೆ 50,000 ರೂ. ತಗೊಳ್ಳಿ, ನಂತರ ಸೈನ್ ಮಾಡುವ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ.

ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ರವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.

ಬುಧವಾರ ಉಪನಿರ್ದೇಶಕಿ ಕೃಷ್ಣವೇಣಿ ಅವರು ಚಾಲಕ ಮಧು ಎಂಬವರ ಮೂಲಕ 50,000 ರೂ. ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪ್ರಭಾರ ಎಸ್‌ಪಿ ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಡಾ| ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಹಾಗೂ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯ್ಕ ಮತ್ತಿತರರು ಭಾಗವಹಿಸಿರುತ್ತಾರೆ.

Follow us on Social media

About the author